ಬೆಂಗಳೂರು, ನ.18:
ರಾಜ್ಯದಾದ್ಯಂತ ಕಾಲೇಜುಗಳು ಆರಂಭವಾಗಿದ್ದರೂ ಕೂಡ ವಿದ್ಯಾರ್ಥಿಗಳ ಹಾಜರಾತಿ ಕಂಡು ಬಂದಿಲ್ಲ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳು ಹಿಂಜರಿಯುತ್ತಿದ್ದಾರೆ.
ಸಕಲ ಮುನ್ನೆಚ್ಚರಿಕೆಗಳೊಂದಿಗೆ ಕಾಲೇಜುಗಳನ್ನು ಆರಂಭಿಸಿದ್ದರೂ ಕೂಡ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿಲ್ಲ, ಬೆರಳೆಣಿಕೆಷ್ಟು ವಿದ್ಯಾರ್ಥಿಗಳು ಬರುತ್ತಿದ್ದು, ಶಾಲೆಗಳನ್ನು ಆರಂಭಿಸುವ ಸರ್ಕಾರದ ತೀರ್ಮಾನಕ್ಕೆ ಹಿನ್ನಡೆಯಾಗುವ ಸಾಧ್ಯತೆಗಳು ಇವೆ. ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ 450 ಮೊಬೈಲ್ ಸ್ವ್ಯಾಬ್ ಸಂಗ್ರಹ ತಂಡಗಳನ್ನು ನಗರದ ಶಿಕ್ಷಣ ಸಂಸ್ಥೆಗಳ ಬಳಿ ನಿಯೋಜಿಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಘೋಷಣೆ ಮಾಡಿದೆ.
ಬಿಬಿಎಂಪಿ ಮಿತಿಯಲ್ಲಿರುವ ಶಿಕ್ಷಣ ಸಂಸ್ಥೆಗಳು ಅಥವಾ ಕಾಲೇಜುಗಳನ್ನು ತಮ್ಮ ಹತ್ತಿರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮ್ಯಾಪ್ ಮಾಡಲಾಗುತ್ತದೆ. ಇಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಪರೀಕ್ಷೆಗೊಳಪಡಬಹುದು. ಈ ತಂಡಗಳು ಸಂಗ್ರಹಿಸಲಿರುವ ಸ್ವಾಬ್ ಪರೀಕ್ಷೆಗಳ ವರದಿಗಳು 24 ಗಂಟೆಗಳ ಅವಧಿಯಲ್ಲಿ ಬರಲಿದೆ. ಪರೀಕ್ಷಾ ವರದಿಗಳನ್ನು ಐಸಿಎಂಆರ್ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಕ್ರಮೇಣ ಕಾಲೇಜುಗಳಿಗೆ ಬರಲು ಪ್ರಾರಂಭಿಸುವ ನಿರೀಕ್ಷೆ ಇರುವುದರಿಂದ, ನಂತರದ ದಿನಗಳಲ್ಲಿ ಪರೀಕ್ಷಿಸಲು ತಂಡಗಳನ್ನು ಕಾಲೇಜುಗಳ ಬಳಿ ನಿಯೋಜಿಸಲು ಪಾಲಿಕೆ ನಿರ್ಧಾರ ಕೈಗೊಂಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೂಡ ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ ನಡೆಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದರೂ ಕೂಡ ತರಗತಿಗಳಿಗೆ ಹಾಜರಾಗುತ್ತಿಲ್ಲ. ಆನ್ ಲೈನ್ ತರಗತಿಗಳತ್ತಲೇ ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಕ್ರಿಯೆ ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ಚಿಂತನೆ ನಡೆಸಿದ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ. ಶಾಲೆಗಳಿಗೆ ಈಗಲೇ ಮಕ್ಕಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.
Designed, Developed and Maintained by PRABHAT SERVICES ™  , AJEYA KANNADA DAILY 2019 ©